Indian Revised Version — Kannada (2019)
ಯೋಬನು 26
1ಆಗ ಯೋಬನು ಹೀಗೆ ಉತ್ತರಕೊಟ್ಟನು, 2“ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು. 3ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ! 4ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?” 5ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು. 6ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ. 7ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ. 8ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು. 9ತನ್ನ ಸಿಂಹಾಸನಕ್ಕೆ ಮರೆಯಾಗಿ, ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು. 10ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ. 11ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು. 12ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು. 13ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು. 14ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..