Skip to content

Indian Revised Version — Kannada (2019)

ಕೀರ್ತನೆಗಳು 36

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. 2ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ. 3ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ. 4ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ. 5ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. 6ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. 7ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. 8ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. 9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ. 10ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು. 11ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು. 12ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.