Skip to content

Indian Revised Version — Kannada (2019)

ಕೀರ್ತನೆಗಳು 62

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ. 2ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು. 3ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ? 4ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ 5ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. 6ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ. 7ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. 8ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ 9ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ. 10ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. 11ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. 12ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.

Keep going

Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..

Books

✦ Explain this verse with AI AI explanations, Bible Q&A, characters, maps and more — in the Truth of Bible app →

Reading settings

Theme
Text size
100%
Layout

Loading the Bibles…

Your choice is remembered on this device and used for reading, search and the verse screen.