Indian Revised Version — Kannada (2019)
ಕೀರ್ತನೆಗಳು 65
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು. ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ. 2ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು. 3ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ. 4ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ. 5ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ. 6ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು. 7ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ. 8ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ. 9ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ. 10ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ. 11ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು. 12ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ. 13ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
This chapter is not in this version.
Keep going
Indian Revised Version — Kannada (2019). Indian Revised Version (Kannada), Bridge Connectivity Solutions, CC BY-SA 4.0, via eBible.org. Inline cross-reference notes removed..